ಕರ್ನಾಟಕದ ಬಗ್ಗೆ ಕೇಂದ್ರದ ಮಲತಾಯಿ ಧೋರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

0

 

ಮಂಗಳೂರು:ರಾಜ್ಯಕ್ಕೆ ಬರಪರಿಹಾರ ಬಿಡುಗಡೆ ಮಾಡುವ ವಿಚಾರದಲ್ಲಿ ಕೇಂದ್ರಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಕೇಂದ್ರದಿಂದ ಬರಪರಿಹಾರ ಬಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯದಲ್ಲಿ ಬರ ಅಧ್ಯಯನಕ್ಕೆ ಕೇಂದ್ರದಿಂದ ತಂಡ ಬಂದಿದೆ. ರಾಜ್ಯದಿಂದಲೂ ಎರಡು ಬಾರಿ ಮನವಿ ಸಲ್ಲಿಸಲಾಗಿದೆ. 236 ತಾಲ್ಲೂಕುಗಳಲ್ಲಿ 216 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಸುಮಾರು 30 ಸಾವಿರ ಕೋಟಿಯಷ್ಟು ಬೆಳೆ ಹಾನಿಯಾಗಿದೆ. ಸುಮಾರು 17,900 ಕೋಟಿ ಪರಿಹಾರವನ್ನು ಕೇಂದ್ರಕ್ಕೆ ಕೋರಲಾಗಿದೆ. ಆದರೆ ಕೇಂದ್ರದಿಂದ ಇದುವರೆಗೂ ಒಂದು ರೂಪಾಯಿಯೂ ಬಿಡುಗಡೆಯಾಗಿಲ್ಲ ಹಾಗೂ ರಾಜ್ಯ ಸಚಿವರನ್ನು ಭೇಟಿಯಾಗಲು ಕೇಂದ್ರ ಸಚಿವರು ಸಮಯವನ್ನೂ ನೀಡುತ್ತಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ :
ಬಿಜೆಪಿಯವರು ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷ ನೀಡುತ್ತಿರುವ ಬಗ್ಗೆ ಮಾಹಿತಿ ಇದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆಯುತ್ತಿದೆ ಎಂಬುದು ತಿಳಿದಿದೆ. ಆದರೆ 50 ಕೋಟಿ, ಅಧಿಕಾರದ ಆಫರ್ ನೀಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಗೃಹಸಚಿವರ ಆಮಂತ್ರಣದ ಮೇರೆಗೆ ಅವರ ಮನೆಗೆ ಭೋಜನಕ್ಕೆ ಹೋಗಿರುವುದೇ ಹೊರತು , ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ತಿಳಿಸಿದರು.

ಸಿಎಂ ಪದದ ಬಗ್ಗೆ ಹರೀಶ್ ಪೂಂಜಾ ಅವರ ಟ್ವೀಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಹರೀಶ್ ಪೂಂಜಾ ಇತ್ತೀಚೆಗಷ್ಟೇ ಶಾಸಕರಾಗಿರುವವರು, ನಾನು 1983 ರಿಂದ ಶಾಸಕನಾಗಿದ್ದೇನೆ ಎಂದರು.

ನಿಗಮಮಂಡಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಪ್ರತಿಕ್ರಿಯೆ ನೀಡಿ, ಮೊದಲ ಹಂತದಲ್ಲಿ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕಾತಿಯನ್ನು ಶೀಘ್ರದಲ್ಲಿ ಮಾಡಲಾಗುವುದು. ಎರಡನೇ ಹಂತದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮಾಜಿ ಶಾಸಕರನ್ನು ಪರಿಗಣಿಸಲಾಗುವುದು ಎಂದರು.

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆ ಮಾಡಬಹುದೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ, ಪ್ರಕರಣದ ತನಿಖೆಯನ್ನು ಕೇಂದ್ರ ಸಿಬಿಐಯವರು ಮಾಡಿದ್ದು, ಈ ಬಗ್ಗೆ ಕೇಂದ್ರದವರೇ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

About The Author

Leave a Reply

Your email address will not be published. Required fields are marked *